ಆಗಸ್ಟ್ 1ರಂದು ವ್ಯಸನಮುಕ್ತ ದಿನಾಚರಣೆ
ಕೊಪ್ಪಳ: ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ದ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 1ರಂದು ಆಚರಿಸುವ ವ್ಯಸನಮುಕ್ತ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದ ಸಮಾರಂಭವನ್ನು ಸಹ ಅಚ್ಚುಕಟ್ಟಾಗಿ ನಡೆಸಬೇಕು. ಮಹಾಂತಸ್ವಾಮೀಜಿಗಳ ಭಾವಚಿತ್ರ ಅನಾವರಣ ಮಾಡಿ ಗೌರವ ವಂದನೆ ಅರ್ಪಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತಜ್ಞರಿಂದ ಭಾಷಣ ಏರ್ಪಡಿಸಿ ಪ್ರತಿಜ್ಞಾ ವಿಧಿ ಕೈಗೊಳ್ಳುವ ಮೂಲಕ ಮದ್ಯಪಾನ, ಮಾದಕದ್ಯವ್ಯ ಮತ್ತು ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತಿ ತಾಲೂಕುಗಳಲ್ಲಿ ಸಹ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರಭಾತ ಪೇರಿ ನಡೆಸಿ, ಶಾಲೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮದ್ಯಪಾನ, ಮಾದಕದ್ಯವ್ಯ ಮತ್ತು ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಹ ಅರಿವು ಮೂಡಿಸಬೇಕು. ಈ ಸಂಬಂಧ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮತ್ತು ಬಿಇಓ ಅವರ ಮೂಲಕ ಎಲ್ಲ ಶಾಲೆಗಳ ಮುಖ್ಯಾಧ್ಯಾಪಕರಿಗೆ ವಿಷಯ ತಿಳಿಸಿ ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದರು. ಶ್ರೀಗಳ ಜನ್ಮದಿನವನ್ನು ರಾಜ್ಯ ಸರ್ಕಾರವು ಪ್ರತಿ ವರ್ಷ ಆಗಸ್ಟ್ 1ರಂದು ವ್ಯಸನ ಮುಕ್ತ ದಿನ ಎಂದು ಆಚರಣೆ ಮಾಡುತ್ತಿದ್ದು ಈ ದಿನಾಚರಣೆ ಮೂಲಕ ಸಹ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕಿದೆ. ಈ ನಿಟ್ಟಿನಲ್ಲಿ ತಜ್ಞರು, ಆಸಕ್ತರು, ಲೇಖಕರಿಂದ ಮದ್ಯಪಾನ, ಮಾದಕದ್ಯವ್ಯ ಮತ್ತು ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಲೇಖನಗಳನ್ನು ಬರೆಯಿಸಿ ಪತ್ರಿಕೆಗಳಲ್ಲಿ ಪ್ರಚುರಪಡಿಸಲು ಕ್ರಮ ವಹಿಸಬೇಕು ಎಂದು ಸಂಘಟಿಕರು ಸಭೆಗೆ ಸಲಹೆ ಮಾಡಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಮುತ್ತು ರಡ್ಡೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ಧಪ್ಪ ಹೊಸಮನಿ ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ